ರಾಣೆಬೆನ್ನೂರು : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೌಡಯ್ಯನಪುರದಲ್ಲಿರುವ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಕಾಯಕ ಕ್ಷೇತ್ರ ಹಾಗೂ ಐಕ್ಯ ಸ್ಥಳವನ್ನು ಕೂಡಲಸಂಗಮ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಯಿತು.
ಕೋಲಿ–ಬೆಸ್ತ ಸಮಾಜದ ಪುಣ್ಯ ಕ್ಷೇತ್ರವಾಗಿರುವ ಚೌಡಯ್ಯನಪುರದಲ್ಲಿ ಗದ್ದುಗೆ ನಿರ್ಮಾಣ, ಸಮಗ್ರ ಅಭಿವೃದ್ಧಿ ಹಾಗೂ ಪ್ರಾಧಿಕಾರ ರಚನೆ ಕುರಿತು ರಾಜ್ಯ ಮತ್ತು ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಣೆಬೆನ್ನೂರು ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ ಅವರ ನೇತೃತ್ವದಲ್ಲಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಚೌಡಯ್ಯನಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು. ಅಲ್ಲದೆ, ಅಭಿವೃದ್ಧಿ ಕಾರ್ಯಗಳ ಕುರಿತು ಸಮಿತಿಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಎಂ ಎಲ್ ಸಿ ತಿಪಣ್ಣಪ್ಪ ಕಮಕನೂರ, ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಕಾಯಕ, ದಾಸೋಹ ಮತ್ತು ಸಮಾನತೆಯ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಚೌಡಯ್ಯನಪುರ ಕ್ಷೇತ್ರವನ್ನು ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಕೇಂದ್ರವನ್ನಾಗಿ ರೂಪಿಸುವ ಪ್ರಯತ್ನಕ್ಕೆ ಸಮಾಜದಿಂದ ಮೆಚ್ಚುಗೆ ವ್ಯಕ್ತವಾಗಿದೆ.
