ನಕಲಿ ವೈದ್ಯರು ಇದ್ದಾರೆ ಎಚ್ಚರಿಕೆ…
ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಜ್ವರದಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಗೆ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ಪರಿಣಾಮವಾಗಿ ಆಕೆ ಮೃತಪಟ್ಟಿರುವುದು ಆತಂಕ ಮೂಡಿಸಿದೆ.
ಮೃತ ಬಾಲಕಿಯನ್ನು ಸಿಂಧು (13) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದ ಆಕೆಗೆ ನಕಲಿ ವೈದ್ಯ ಇಂಜೆಕ್ಷನ್ ನೀಡಿದ್ದಾನೆ. ಆದರೆ ಇಂಜೆಕ್ಷನ್ ಪಡೆದ ತಕ್ಷಣವೇ ಆಕೆಯ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ದೇಹದಲ್ಲಿ ಅಸ್ವಸ್ಥತೆ ಹಾಗೂ ಗುಳ್ಳೆಗಳು ಕಾಣಿಸಿಕೊಂಡಿದ್ದವು.
ಕುಟುಂಬದವರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಿಂಧು ಕೊನೆಯುಸಿರೆಳೆದಿದ್ದಾಳೆ. ಈ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ತಿಳಿದ ಕೂಡಲೇ ಆರೋಪಿತ ನಕಲಿ ವೈದ್ಯ ಸ್ಥಳದಿಂದ ಪರಾರಿಯಾಗಿದ್ದರೂ, ಪೊಲೀಸರು ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಾರ್ವಜನಿಕರಲ್ಲಿ ಆತಂಕ:
ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಮತ್ತೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.
