ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬಳು ಚಾಕು ದಾಳಿಗೆ ಬಲಿಯಾಗಿದ್ದಾಳೆ.
ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಲಾವಣ್ಯ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಯುವಕನೊಬ್ಬ ಚಾಕುವಿನಿಂದ ದಾಳಿ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ದಾಳಿ ನಡೆಸಿದ ಆರೋಪಿ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಿಂದ ಬಿ.ಸಿ.ರೋಡ್ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಆರೋಪಿಯ ಬಂಧನಕ್ಕಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
