ವಿಜಯಪುರ: ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗಳಂತಹ ಬೃಹತ್ ಕ್ರೀಡಾಕೂಟಗಳ ಆಯೋಜನೆಯಿಂದ ವಿಜಯಪುರ ಜಿಲ್ಲೆಗೆ ಹೊಸ ಗುರುತು ಹಾಗೂ ಹೊಸ ಔಟ್‌ಲುಕ್ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ನಗರದಲ್ಲಿ ಭಾನುವಾರ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ವಿಜಯಪುರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಕ್ರೀಡಾಕೂಟ ಆಯೋಜಿಸಿರುವುದು ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
ರಾಜ್ಯ ಮಟ್ಟದ ಪಂದ್ಯಾವಳಿಗಳು ಜಿಲ್ಲೆಯನ್ನು ಕ್ರೀಡಾ ನಕ್ಷೆಯಲ್ಲಿ ಗುರುತಿಸುವುದರ ಜೊತೆಗೆ ಯುವ ಪ್ರತಿಭೆಗಳಿಗೆ ಹೊಸ ಅವಕಾಶಗಳನ್ನು ಕಲ್ಪಿಸುತ್ತವೆ. ಯುವ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂಬ ಆಶಯ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ವಿಜಯಪುರದಲ್ಲಿ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿ ಎಂದು ಆಶಿಸಿದರು.
ಹಿಂದೆ ಹಿಂದುಳಿದ ಹಾಗೂ ಬರಪೀಡಿತ ಜಿಲ್ಲೆ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದ ವಿಜಯಪುರ ಈಗ ಅಭಿವೃದ್ಧಿಯತ್ತ ಸಾಗುತ್ತಿದೆ. ನೀರಾವರಿ ಸೌಲಭ್ಯಗಳಿಂದ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಂಡಿದ್ದು, ಇದೀಗ ಕ್ರೀಡಾ ಚಟುವಟಿಕೆಗಳಲ್ಲಿಯೂ ಜಿಲ್ಲೆ ಹೊಸ ಚೈತನ್ಯ ಪಡೆಯುತ್ತಿದೆ ಎಂದು ಹೇಳಿದರು.
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಮಾತನಾಡಿ, ವಿಜಯಪುರದಲ್ಲಿ ಮೊದಲ ಬಾರಿಗೆ ಬೃಹತ್ ಮಟ್ಟದಲ್ಲಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ. ಬಿಎಲ್‌ಡಿಇ ಸಂಸ್ಥೆ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಪಂದ್ಯಾವಳಿ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ ಎಂದರು.
ಶಾಸಕ ವಿಠಲ ಕಟಕದೊಂಡ ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿರುವುದು ಜಿಲ್ಲೆಯ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಯಾವುದೇ ಕ್ರೀಡಾಕೂಟ ಹಾಗೂ ಕಾರ್ಯಕ್ರಮಗಳಿಗೆ ವಿಜಯಪುರ ಜಿಲ್ಲೆಯ ಆತಿಥ್ಯ ಸದಾ ಸಿದ್ಧವಿರುತ್ತದೆ. ಕ್ರೀಡಾ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು.
