Friday, August 7, 2026
Homeಜಿಲ್ಲಾ ಸುದ್ದಿಗಳುಅಡಳಟ್ಟಿ ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಲಕ್ಷ್ಮಣ...

ಅಡಳಟ್ಟಿ ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆ


ಅಥಣಿ: ತಾಲೂಕಿನ ಅಡಳಟ್ಟಿ ಗ್ರಾಮದ ಹಿಪ್ಪರಗಿ ತೋಟದ ಶಾಲೆಯ ಹತ್ತಿರ ಹಳ್ಳಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಭೂಮಿ ಪೂಜೆ ನೆರವೇರಿಸಿದರು.
2025-26ನೇ ಸಾಲಿನ ಲೆಕ್ಕ ಶೀರ್ಷಿಕೆ 7402ರ ಅಡಿಯಲ್ಲಿ ಸುಮಾರು 2 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಈ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು ಕ್ಷೇತ್ರದ ರೈತರ ಹಿತದೃಷ್ಟಿಯಿಂದ ನೀರಾವರಿ ಮತ್ತು ಸಂಪರ್ಕ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಡಳಟ್ಟಿ ಗ್ರಾಮದ ರೈತರ ಹಲವು ವರ್ಷಗಳ ಬೇಡಿಕೆಯಾಗಿದ್ದ ಈ ಬ್ರಿಜ್ ಕಂ ಬ್ಯಾರೇಜ್‌ನಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಾಗುವುದಲ್ಲದೆ, ಮಳೆಗಾಲದಲ್ಲಿ ಸಂಚಾರಕ್ಕೆ ಎದುರಾಗುತ್ತಿದ್ದ ಸಮಸ್ಯೆಯೂ ನೀಗಲಿದೆ. ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೃಷಿ ಚಟುವಟಿಕೆಗಳಿಗೆ ಪೂರಕವಾದ ಇಂತಹ ಮೂಲಸೌಕರ್ಯಗಳನ್ನು ಒದಗಿಸಲು ನಾನು ಸದಾ ಬದ್ಧ,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ