ಅಥಣಿ: ಸರ್ಕಾರದಿಂದ ಇನ್ನಷ್ಟು ಅನುದಾನಗಳನ್ನು ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಥಣಿ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ ಎಂದು ಯುವ ನಾಯಕ ಚಿದಾನಂದ ಸವದಿ ಹೇಳಿದರು.
ಅವರು ತಾಲೂಕಿನ ಬಡಚಿ, ಕೊಕಟನೂರ, ಕಟಗೇರಿ ಹಾಗೂ ಸುಟ್ಟಟ್ಟಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಅನುದಾನದಡಿ ಸಮುದಾಯ ಭವನ ನಿರ್ಮಾಣ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 80 ಲಕ್ಷ ರೂ. ಜಿಲ್ಲಾ ಪಂಚಾಯತ್ ವತಿಯಿಂದ ರಸ್ತೆ ನಿರ್ಮಾಣಕ್ಕಾಗಿ 50 ಲಕ್ಷ ರೂ. ಅನುದಾನ ನೀಡಲಾಗಿದೆ. ಒಟ್ಟು 1 ಕೋಟಿ 30 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಬಲಪಡಿಸಲು ನಿರಂತರವಾಗಿ ಶಾಸಕ ಲಕ್ಷ್ಮಣ ಸವದಿ ಅವರು ಪ್ರಯತ್ನಿಸುತ್ತಿದ್ದಾರೆ. ಜನರ ಸಹಕಾರದೊಂದಿಗೆ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿ, ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮುಂದುವರಿಯಲಿದೆ ಎಂದು ಚಿದಾನಂದ ಸವದಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
