ಮುಂಡಗೋಡ: ಸಾರ್ವಜನಿಕ ಶಾಂತಿ, ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವ ಹಿನ್ನೆಲೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಆರೋಪಿಗಳಿಗೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಬಸಾಪೂರ ನಿವಾಸಿ ಮಧುಸಿಂಗ್ ಗಂಗಾರಾಮಸಿಂಗ್ ರಜಪೂತ (31) ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದರೋಡೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಈತನ ಅಪರಾಧ ಚಟುವಟಿಕೆಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಕಂಡುಬಂದ ಹಿನ್ನೆಲೆ, ಪೊಲೀಸ್ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಆತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯ ಮಂಡ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ 6 ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.
ಇದೇ ರೀತಿ ಗಾಂಧೀನಗರದ ಮಂಜು ಅರ್ಜುನ ನವಲೆ (30) ವಿರುದ್ಧವೂ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆ, ಆತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕೆಜಿಎಫ್ ಜಿಲ್ಲೆಯ ರಾಬರ್ಟ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ 6 ತಿಂಗಳ ಅವಧಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ಜೂನ್ 27, 2026ರಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಮುಂಡಗೋಡ ಪೊಲೀಸ್ ಠಾಣೆಯ ಅಧಿಕಾರಿಗಳು ಇಬ್ಬರನ್ನೂ ಸಂಬಂಧಿತ ಜಿಲ್ಲೆಗಳ ಪೊಲೀಸ್ ಠಾಣಾ ವ್ಯಾಪ್ತಿಗೆ ಸ್ಥಳಾಂತರಿಸುವ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
