ಅಥಣಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯನ್ನು ಈಡೇರಿಸಬೇಕು ಎಂದು ದಲಿತ ಸಮಾಜದ ಮುಖಂಡ ಮಾಂತೇಶ ಬಾಡಗಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಿವಯೋಗಿಗಳ ಪವಿತ್ರ ಕ್ಷೇತ್ರದಲ್ಲಿ ಸಾರ್ವಜನಿಕವಾಗಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆದರೂ ಈವರೆಗೆ ಆ ಭರವಸೆ ಈಡೇರಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷ್ಮಣ ಸವದಿ ಅವರು ತಮ್ಮದೇ ಆದ ಪ್ರಭಾವ ಹೊಂದಿದ್ದು, ಉತ್ತಮ ಸಂಘಟನಾ ಚಾತುರ್ಯ ಹಾಗೂ ರಾಜಕೀಯ ಅನುಭವವನ್ನು ಹೊಂದಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಪ್ರಚಾರ ನಡೆಸಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಪಕ್ಷದ ಬಲವರ್ಧನೆಗೆ ಅವರು ಮಹತ್ವದ ಕೊಡುಗೆ ನೀಡಿದ್ದು, ಮುಂಬರುವ ಚುನಾವಣೆಯಲ್ಲಿಯೂ ಪಕ್ಷದ ಗೆಲುವಿಗೆ ಪ್ರಮುಖ ಪಾತ್ರವಹಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದರು.
ಆದ್ದರಿಂದ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
