ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ಗ್ರಾಮ ಪಂಚಾಯತಿಗಳ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಪರಿಣಾಮ ತಕ್ಷಣ ಮುಷ್ಕರ ಹಿಂಪಡೆದು ಕಚೇರಿ ಕಾರ್ಯಗಳಲ್ಲಿ ತೊಡಗುವುದಾಗಿ ನೌಕರರ ಸಂಘದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯ್ತಿಗಳ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಸೇರಿ ಸುಮಾರು 300ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸಿ ವಿವಿಧ ಬೇಡಿಕೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು.
ಮೂರು ಗಂಟೆ ನಡೆದ ಸಭೆಯಲ್ಲಿ 75ಕ್ಕೂ ಹೆಚ್ಚು ಬೇಡಿಕೆಗಳನ್ನು ಪ್ರಿಯಾಂಕ್ ಖರ್ಗೆ ಆಲಿಸಿದರು. ಬಳಿಕ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುತ್ತೇವೆ. ಜತೆಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಭರವಸೆ ನೀಡಿದರು.
ಈ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ನೌಕರರ ಸಂಘದ ಪ್ರತಿನಿಧಿಗಳು ತಕ್ಷಣದಿಂದ ಮುಷ್ಕರ ಹಿಂಪಡೆಯುತ್ತೇವೆ. ಜತೆಗೆ ಕಚೇರಿ ಕಾರ್ಯಗಳಲ್ಲಿ ಭಾಗವಹಿಸುತ್ತೇವೆ. ನೀವು ಕೊಟ್ಟಿರುವ ಭರವಸೆಯಂತೆ ಬೇಡಿಕೆಗಳನ್ನು ಈಡೇರಿಸಿ ಎಂದು ಹೇಳಿ ಮುಷ್ಕರ ಹಿಂಪಡೆಯುತ್ತಿರುವುದಾಗಿ ಘೋಷಿಸಿದರು.