
ಅಥಣಿ:ತಾಲೂಕಿನ ಪ್ರಯಾಣಿಕರ ಅನುಕೂಲಕ್ಕಾಗಿ ಅಥಣಿಯಿಂದ ಪುಣೆ ಹಾಗೂ ಅಥಣಿಯಿಂದ ಕೊಲ್ಲಾಪುರ ಮಾರ್ಗವಾಗಿ ನೂತನ ಬಸ್ ಸೇವೆಗಳನ್ನು ಪ್ರಾರಂಭಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಸೇವೆಗೆ ಚಾಲನೆ ನೀಡಿದರು.
ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಅಥಣಿ ತಾಲೂಕಿನ ಜನತೆ ಉದ್ಯೋಗ, ಶಿಕ್ಷಣ ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಪುಣೆ ಮತ್ತು ಕೊಲ್ಲಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ. ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ, ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲಾಗಿದೆ. ಈ ಸೇವೆಯು ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ವ್ಯಾಪಾರಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ,ಎಂದು ತಿಳಿಸಿದರು.
ಅಲ್ಲದೆ, ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಸಾರಿಗೆ ಸಂಪರ್ಕ ಅತ್ಯಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ದಿನಾಲು ಅಥಣಿಯಿಂದ ಶಿರಸಿ ವರೆಗೆ ಬಸ್ ಸೇವೆ ಒದಗಿಸಲು ಹಾಗೂ ಇನ್ನೂ ಹೆಚ್ಚಿನ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಮಹಾದೇವ ಮುಂಜಿ, ಎನ್. ಎಂ. ಕೇರಿ, ಬಿ.ಬಿ. ಜಗದಾಳ, ಸಿದ್ದಾರ್ಥ ಶಿಂಗೆ, ಶಾಮ ಪೂಜಾರಿ, ವಿನಾಯಕ ಬಾಗಡಿ, ಕಲ್ಲೇಶ ಮಡ್ಡಿ ಸೇರಿದಂತೆ ಸಾರಿಗೆ ಇಲಾಖೆಯ ಸಿಬ್ಬಂದಿ, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
