ಅಥಣಿ: “ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸುವುದು ನಮ್ಮ ಜವಾಬ್ದಾರಿ ಎಂಬ ಮನೋಭಾವನೆಯೊಂದಿಗೆ ಪಾಲಕರು ಮುಂದಾಗಬೇಕು” ಎಂದು ಅಥಣಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಕರೆ ನೀಡಿದರು.
ಅವರು ಪಟ್ಟಣದ ವಿಕ್ರಮಪೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಯಿಂದಲೇ ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. 5ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮದೊಂದಿಗೆ, 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದ ಕಲಿಕೆ ಲಭ್ಯವಿದೆ. ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಉಚಿತ ಆರೋಗ್ಯ ತಪಾಸಣೆ, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಬಿಸಿಯೂಟದ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಪಾಲಕರು ಈ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ ಮಾತನಾಡಿ, “ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಪ್ರತಿ ತಿಂಗಳು ಪಾಲಕ-ಶಿಕ್ಷಕರ ಸಭೆ, ಮಕ್ಕಳ ಕಲಿಕಾ ಪ್ರಗತಿಯ ನಿರಂತರ ಮೌಲ್ಯಮಾಪನ, ಎಸ್‌ಡಿಎಂಸಿ ಸಭೆಗಳನ್ನು ನಡೆಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಪ್ರಾಜೆಕ್ಟ್ ಆಧಾರಿತ ಕಲಿಕೆ ಹಾಗೂ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ಸಮಾನವಾದ ಸೌಲಭ್ಯಗಳು ಇಲ್ಲಿವೆ” ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ರಾಕೇಶ ಮೈಗೂರ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ರಾಜಶೇಖರ ಗುಡೊಡಗಿ, ರಿಯಾಜ್ ಸನದಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ, ಬಿಸಿಯೂಟ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ನಾಮದಾರ, ಶಾಲೆಯ ಮುಖ್ಯೋಪಾಧ್ಯಾಯ ಡಿ.ಎಸ್. ಬಸರಗಿ, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
